ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಬಿಜೆಪಿ ನಾಯಕರು ಆರೋಪದಿಂದ ಖುಲಾಸೆ

0 81

ನವದೆಹಲಿ: ಅಯೋಧ್ಯೆಯ ಬಾಬ್ರಿ ಮಸೀದಿ ಕಟ್ಟಡ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತವಲ್ಲ. ಇದಕ್ಕೆ ಸಾಕ್ಷ್ಯಾಧಾರಗಳಿಲ್ಲ ಎಂದು ತೀರ್ಪ ನೀಡುವ ಮೂಲಕ ಬಿಜೆಪಿಯ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ೩೨ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.
ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ಯಾಧವ ನೇತೃತ್ವದ ನ್ಯಾಯಪೀಠ ೨ ಸಾವಿರ ಪುಟಗಳ ತೀರ್ಪನ್ನು ಪ್ರಕಟಿಸಿದ್ದು,ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ ಕಟಿಯಾರ ಸೇರಿದಂತೆ ೩೨ ಮಂದಿ ಈಗ ಈ ಪ್ರಕರಣದಲ್ಲಿ ಆರೋಪಮುಕ್ತರಾಗಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣಸಿಂಗ್, ಉಮಾಭಾರತಿ, ನೃತ್ಯಗೋಪಾಲ ದಾಸ್ ಸೇರಿ ಆರು ಜನರಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ೩೨ ಜನರಲ್ಲಿ ೨೬ ಜನರು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಮೊಘಲರ ಆಡಳಿತದಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಿಸಲಾಗಿತ್ತು. ಅಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಹಿಂದೂಗಳು ಆರೋಪಿಸಿದ್ದರು. ೧೯೮೪ರಲ್ಲಿ ವಿಶ್ವಹಿಂದು ಪರಿಷತ್ ಈ ವಿಚಾರದಲ್ಲಿ ಉಗ್ರ ಹೋರಾಟ ಮಾಡಿತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ೧೯೯೨ರ ಡಿಸೆಂಬರ್ ೬ ರಂದು ಕರಸೇವಕರೆಂಬ ಹಿಂದೂ ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದರು. ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಸೇರಿದಂತೆ ೩೨ ಜನರು ಸೇರಿಕೊಂಡು ಸಂಚುರೂಪಿಸಿ ಭೂವಿವಾದ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ವೇಳೆ ೧೯೯೨ರ ಡಿಸೆಂಬರ್ ೬ ರಂದು ಬಾಬ್ರಿ ಮಸೀದಿಯನ್ನು ಕೆಡವಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಿಸಲಾಗಿತ್ತು.
ಸಿಬಿಐ ವಿಶೇಷ ನ್ಯಾಯಾಲಯ ೨೮ ವರ್ಷಗಳ ಹಳೆಯ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರ ಪಾತ್ರ ಇಲ್ಲ. ಪ್ರಚೋದನೆಯೂ ಇಲ್ಲ. ಹಾಗಾಗಿ, ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಸೇರಿದಂತೆ ೩೨ ಜನರನ್ನು ಆರೋಪದಿಂದ ಖುಲಾಸೆಗೊಳಿಸಲಾಗಿದೆ.

Leave A Reply

Your email address will not be published.